
ಸಾಗರ/ಹೊಸನಗರ: ಸಾಗರ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (KPCC) ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಮಾಜಿ ಜಿಪಂ ಸದಸ್ಯ ಕಲಗೋಡು ರತ್ನಾಕರ್ ಅರ್ಜಿ ಸಲ್ಲಿಸಿದ್ದಾರೆ.
ಪಕ್ಷದ ನಿಯಮಾವಳಿಯಂತೆ ರೂ.2 ಲಕ್ಷ ಶುಲ್ಕ ನೀಡಿ ಅರ್ಜಿ ಸಲ್ಲಿಸಿದ್ದು ಇದೇ ಮೊದಲ ಬಾರಿಗೆ ಅಧಿಕೃತವಾಗಿ ಅಭ್ಯರ್ಥಿತನಕ್ಕೆ ಉಮೇದುವಾರಿಕೆ ತೋರಿದ್ದಾರೆ.


ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ (AICC) ಪ್ರಧಾನ ಕಾರ್ಯದರ್ಶಿ ಸುರ್ಜೀವಾಲ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ನಡೆದ ಶಿವಮೊಗ್ಗ ಜಿಲ್ಲೆಯ ರಾಜಕೀಯ ಮತ್ತು ತಮ್ಮ 33 ವರ್ಷದ ಸುಧೀರ್ಘ ರಾಜಕೀಯ ಜೀವನ, ಪಕ್ಷ ಸಂಘಟನೆ ವಿಷಯವನ್ನು ಮುಂದಿಟ್ಟು ಆಕಾಂಕ್ಷಿತನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಕಲಗೋಡು ಹಿನ್ನೆಲೆ:
ಕಾಂಗ್ರೆಸ್ ಪಕ್ಷದ ಕಟ್ಟಾಳು ಕಲಗೋಡು ರತ್ನಾಕರ್, 1987 – 1992 ಮಂಡಲ ಪಂಚಾಯತ್ ಸದಸ್ಯರಾಗಿ, 1995-2000 ರಲ್ಲಿ ತಾಲೂಕು ಪಂಚಾಯತ್ ಸದಸ್ಯರಾಗಿ, 2000-2021 ರ ತನಕ ನಾಲ್ಕು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ.
ಕಲಗೋಡು ಯೋಗೇಂದ್ರ ರಾವ್ ಮಗನಾದ ಕಲಗೋಡು ಮೂಲತಃ ಕೃಷಿಕರಾಗಿದ್ದು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಮಾಜಿ ಸಚಿವ ಹಿರಿಯ ಕಾಂಗ್ರೆಸಿಗ ಕಾಗೋಡು ತಿಮ್ಮಪ್ಪ ವಯೋ ಸಹಜವಾಗಿ ಸ್ಪರ್ಧೆಯಿಂದ ದೂರ ಉಳಿಯುವ ಸಾಧ್ಯತೆ ಹೆಚ್ಚಿರುವ ಕಾರಣ ಕಲಗೋಡು ರತ್ನಾಕರ್ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ.
ಈಗಾಗಲೇ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಕಾಗೋಡು ಪುತ್ರಿ ರಾಜನಂದಿನಿ ಹೆಸರಿನ ಜೊತೆಗೆ ಕಲಗೋಡು ರತ್ನಾಕರ ಹೆಸರು ಅಧಿಕೃತವಾಗಿ ಸೇರ್ಪಡೆಯಾಗಿದೆ.
ಹೈಕಮಾಂಡ್ ಮೇಲೆ ವಿಶ್ವಾಸವಿದೆ:
ಮಂಡಲ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಗೆ ಆಯ್ಕೆಯಾಗಿ ಸುಧೀರ್ಘವಾಗಿ ಸೇವೆ ಸಲ್ಲಿಸಿದ್ದೇನೆ. ಅಲ್ಲದೇ ಪಕ್ಷ ನೀಡಿದ ಸಂಘಟನೆ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಹೀಗಾಗಿ ಸಹಜವಾಗಿ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದು ಹೈಕಮಾಂಡ್ ಮೇಲೆ ವಿಶ್ವಾಸವಿದೆ.
– ಕಲಗೋಡು ರತ್ನಾಕರ್, ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ
