ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ಕೇಂದ್ರಕ್ಕೆ ಮನವಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ನಿಯೋಗ

ಶಿವಮೊಗ್ಗ: ಜು.25: ಮಲೆನಾಡಿಗರ ನಿದ್ದೆಗೆಡಿಸಿರುವ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನ ಮಾಡದಂತೆ ಕೇಂದ್ರ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ನಿಯೋಗ ಮನವಿ ಸಲ್ಲಿಸಿದೆ.

ಸದರಿ ವರದಿಯನ್ನು ಪರಿಗಣಿಸುವ ಮೊದಲು ಪಶ್ಚಿಮ ಘಟ್ಟಗಳಲ್ಲಿ ವಾಸವಾಗಿರುವ ಹಾಗೂ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವ ರೈತರ ಕೋರಿಕೆಯಂತೆ, ಬೌತಿಕ ಸರ್ವೇ (physical Landscaping) ನಡೆಸುವಂತೆ ಕೇಂದ್ರ ಅರಣ್ಯ ಸಚಿವರಾದ  ಭೂಪೆಂದ್ರ ಯಾದವ್ ಅವರನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ  ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ನಿಯೋಗದೊಂದಿಗೆ ಭೇಟಿ ಮಾಡಿ ಚರ್ಚಿಸಲಾಯಿತು.

ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಕೇಂದ್ರ ಅರಣ್ಯ ಸಚಿವಾಲಯದಿಂದ 5 ಜನರನ್ನೊಳಗೊಂಡ ತಂಡವನ್ನು ರಚಿಸಿ, ರೈತರ ಹಿತ ಕಾಯುವ ವರದಿಯನ್ನು ಮುಂದಿನ ಒಂದು ವರ್ಷದ ಒಳಗಾಗಿ ಸಚಿವಾಲಯಕ್ಕೆ ಸಲ್ಲಿಸುವಂತೆ ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ರಾಜ್ಯ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಸಂಸದರಾದ ಬಿ.ವೈ ರಾಘವೇಂದ್ರ, ಪ್ರತಾಪ್ ಸಿಂಹ, ಡಿ.ಎನ್ ಜೀವರಾಜ್ ಮತ್ತಿತರರು ಉಪಸ್ಥಿತರಿದ್ದರು.

Exit mobile version